ಕೊಳೆಗೇರಿ ನಿವಾಸಿಗಳನ್ನೂ ಸಮಾಜದ ಮುಖ್ಯವಾಹಿನಿಗೆ ತರಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರ ಬೃಹತ್ ಪ್ರಮಾಣದಲ್ಲಿ ಮನೆಗಳನ್ನು ವಿತರಿಸುತ್ತಿದ್ದು, ಸರ್ಕಾರದ ಗ್ಯಾರಂಟಿ ಯೋಜನೆಗಳ ಮೂಲ ಉದ್ದೇಶವೇ ಬಡವರ ಸಬಲೀಕರಣ ಎಂದು ಮುಖ್ಯಮಂತ್ರಿ ಹೇಳಿದರು.
ಹುಬ್ಬಳ್ಳಿಯಲ್ಲಿ ಇಂದು ಆಯೋಜಿಸಿದ್ದ ಅರ್ಹ ಫಲಾನುಭವಿಗಳಿಗೆ ನೂತನ ಮನೆಯ ಹಕ್ಕುಪತ್ರ ವಿತರಣಾ ಸಮಾರಂಭದಲ್ಲಿ ಮಾತನಾಡಿದ ಅವರು, “ನಾನು ಮೊದಲ ಬಾರಿ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ 14,58,000 ಮನೆಗಳನ್ನು ನಿರ್ಮಿಸಿ ವಸತಿ ಕ್ರಾಂತಿ ಮಾಡಿತ್ತು. ಎರಡನೇ ಬಾರಿ ಮುಖ್ಯಮಂತ್ರಿ ಆದ ಬಳಿಕ 2024ರಲ್ಲಿ ಮೊದಲ ಹಂತದಲ್ಲಿ 36,789 ಮನೆಗಳನ್ನು ವಿತರಿಸಿದ್ದೇವೆ. ಇದೀಗ ಎರಡನೇ ಹಂತದಲ್ಲಿ 45 ಸಾವಿರ ಮನೆಗಳನ್ನು ಹಂಚುತ್ತಿದ್ದೇವೆ” ಎಂದು ಹೇಳಿದರು.
ನಾವು ಹೇಳಿದಂತೆ ನುಡಿದಂತೆ ನಡೆದುಕೊಂಡಿದ್ದೇವೆ. ಆದರೆ ಅವರು ಹೇಳಿದುದನ್ನು ಮಾಡದೆ ನಮ್ಮ ಬಗ್ಗೆ ಸುಳ್ಳು ಪ್ರಚಾರ ಮಾಡುತ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. “ವಿದೇಶದಿಂದ ಕಪ್ಪು ಹಣ ತಂದು ಪ್ರತಿಯೊಬ್ಬರ ಖಾತೆಗೆ 15 ಲಕ್ಷ ರೂ. ಹಾಕುತ್ತೇವೆ ಎಂದರು. ಹಾಕಿದ್ರಾ?” ಎಂದು ಪ್ರಶ್ನಿಸಿದರು.
ಮಹದಾಯಿ, ಕೃಷ್ಣ ಮೇಲ್ದಂಡೆ ಹಾಗೂ ಭದ್ರಾ ಮೇಲ್ದಂಡೆ ಯೋಜನೆಗಳ ವಿಚಾರದಲ್ಲಿಯೂ ಬಿಜೆಪಿ ಹಾಗೂ ಕೇಂದ್ರ ಸರ್ಕಾರ ಮಾತು ತಪ್ಪಿದ್ದು, ರಾಜ್ಯದ ಜನತೆಗೆ ವಂಚನೆ ಮಾಡಿದೆ ಎಂದು ಆರೋಪಿಸಿದರು. ಈ ಎಲ್ಲ ವಿಷಯಗಳಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಉತ್ತರಿಸಬೇಕು ಎಂದು ಒತ್ತಾಯಿಸಿದರು.
ವಸತಿ ಯೋಜನೆಗಳಲ್ಲಿ ರಾಜ್ಯ ಸರ್ಕಾರವೇ ಹೆಚ್ಚಿನ ಹಣ ನೀಡುತ್ತಿದೆ ಎಂದು ಸ್ಪಷ್ಟಪಡಿಸಿದ ಮುಖ್ಯಮಂತ್ರಿ, “ಒಂದು ಮನೆಗೆ 4ರಿಂದ 5 ಲಕ್ಷ ರೂ. ನೀಡುವುದು ರಾಜ್ಯ ಸರ್ಕಾರ. ಕೇಂದ್ರ ಸರ್ಕಾರ ಕೊಡುವುದು ಒಂದು ಲಕ್ಷ ರೂ.ಗೂ ಕಡಿಮೆ. ಆದರೆ ಯೋಜನೆಯ ಹೆಸರು ಮಾತ್ರ ಪ್ರಧಾನಮಂತ್ರಿ ಆವಾಸ್ ಯೋಜನೆ. ಹಣ ನಮ್ಮದು, ಹೆಸರು ಕೇಂದ್ರ ಸರ್ಕಾರದದು” ಎಂದು ಟೀಕಿಸಿದರು.
ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕೇವಲ ಎರಡು ವರ್ಷಗಳಲ್ಲಿ ವಸತಿ ಯೋಜನೆಗಳಿಗಾಗಿ 5,500 ಕೋಟಿ ರೂ. ಖರ್ಚು ಮಾಡಲಾಗಿದೆ ಎಂದು ತಿಳಿಸಿದರು. “ಇಷ್ಟೆಲ್ಲಾ ಆದರೂ ಸರ್ಕಾರದ ಬೊಕ್ಕಸ ಖಾಲಿ ಎಂದು ಬಿಜೆಪಿ ಸುಳ್ಳು ಹೇಳುತ್ತಿದೆ. ರೈತರ ಪಂಪ್‌ಸೆಟ್‌ಗಳಿಗೆ ಪ್ರತಿ ವರ್ಷ ₹2,500 ಕೋಟಿ ಸಬ್ಸಿಡಿ ನೀಡುತ್ತಿದ್ದೇವೆ. ವಿಧವಾ ವೇತನ, ವೃದ್ಧಾಪ್ಯ ವೇತನ ಸೇರಿದಂತೆ ಎಲ್ಲ ಯೋಜನೆಗಳಿಗೂ ಹೇರಳವಾಗಿ ಹಣ ಬಿಡುಗಡೆ ಮಾಡುತ್ತಿದ್ದೇವೆ” ಎಂದರು.
ರಾಜ್ಯ ಹಾಗೂ ನಮ್ಮ ಸರ್ಕಾರ ಎರಡೂ ಸದೃಢವಾಗಿವೆ ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದರು.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲEditor Kannada Express 1st Floor, Raaj Towers Udupi - 576101
+919008424891
Kannadaexpress@gmail.com
© 2025 KannadaExpress. All Rights Reserved.
Design by GreyCrust Solutions