ವಿದ್ಯಾರ್ಥಿ ಜೀವನವು ಅವಕಾಶಗಳ ಸಾಗರವಾಗಿದ್ದು, ಮಕ್ಕಳ ಶಿಕ್ಷಣ, ಸಂಸ್ಕಾರ, ಆರೋಗ್ಯ ಹಾಗೂ ಉತ್ತಮ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ನಾವೆಲ್ಲರೂ ಒಂದಾಗಿ ಕೈಜೋಡಿಸಿ ಕೆಲಸ ಮಾಡಬೇಕು ಎಂದು ಅಚ್ಚಡ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಾಲಾಭಿವೃದ್ಧಿ ಸಮಿತಿ ಹಾಗೂ ಲಯನ್ಸ್ ಕ್ಲಬ್ ಕುಂಜಿಬೆಟ್ಟು ಅಧ್ಯಕ್ಷ ಅಶೋಕ್ ರಾವ್ ಹೇಳಿದರು.
ಅಚ್ಚಡ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಅವರು, ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಶಾಲೆ, ಶಿಕ್ಷಕರು, ಪೋಷಕರು ಹಾಗೂ ಸಮಾಜದ ಸಹಕಾರ ಅತ್ಯಗತ್ಯ. ಮಕ್ಕಳಲ್ಲಿರುವ ಪ್ರತಿಭೆ ಮತ್ತು ಆಸಕ್ತಿಯನ್ನು ಗುರುತಿಸಿ ಅವರಿಗೆ ಸೂಕ್ತ ಅವಕಾಶಗಳನ್ನು ಕಲ್ಪಿಸುವ ಮೂಲಕ ಉತ್ತಮ ಭವಿಷ್ಯ ರೂಪಿಸಲು ಪ್ರೋತ್ಸಾಹಿಸಬೇಕು ಎಂದರು.
ಶಾಲಾ ವಿದ್ಯಾರ್ಥಿ ನಾಯಕ ಪ್ರಣಾಮ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಗಣ್ಯರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಶಾಲಾ ಮುಖ್ಯ ಶಿಕ್ಷಕಿ ಗಿರಿಜಾ ಅವರು ಸ್ವಾಗತಿಸಿದರು.
ಶಾಲಾ ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷರು ಹಾಗೂ ಲಿಯೋ ಕೋಆರ್ಡಿನೇಟರ್ ರಂಜಿತ್ ಶೆಟ್ ಮಾತನಾಡಿ, ಪೋಷಕರು ಮಕ್ಕಳಿಗೆ ಮೊಬೈಲ್ ಬಳಕೆಯ ಅಭ್ಯಾಸವನ್ನು ಕಡಿಮೆ ಮಾಡಿಸಿ, ಅವರ ಆಸಕ್ತಿ ಮತ್ತು ಅಭಿರುಚಿಗೆ ಅನುಗುಣವಾಗಿ ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಅವಕಾಶ ಕಲ್ಪಿಸಬೇಕು. ಮಕ್ಕಳ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಮೂಲಕ ಅವರಲ್ಲಿ ಆತ್ಮವಿಶ್ವಾಸ ಬೆಳೆಸಬೇಕು ಎಂದು ಕಿವಿಮಾತು ಹೇಳಿದರು.
ಕಾರ್ಯಕ್ರಮದಲ್ಲಿ ಸುಪ್ರಸಿದ್ಧ 'ಕಾಂತಾರ' ಚಲನಚಿತ್ರದಲ್ಲಿ ಅಭಿನಯಿಸಿರುವ ಚಂದ್ರಕಲಾ ರಾವ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಪ್ರಥಮ ಸ್ಥಾನ ಗಳಿಸಿದ ವಿದ್ಯಾರ್ಥಿಗಳನ್ನು ಗುರುತಿಸಿ ಅಭಿನಂದಿಸಲಾಯಿತು. ಮಕ್ಕಳ ದಿನಾಚರಣೆಯ ಪ್ರಯುಕ್ತ ಶಾಲಾಭಿವೃದ್ಧಿ ಸಮಿತಿ ವತಿಯಿಂದ ವಿದ್ಯಾರ್ಥಿಗಳಿಗೆ ಹೂಪ್ಸ್‌ಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್ ಕುಂಜಿಬೆಟ್ಟುವಿನ ಕಾರ್ಯದರ್ಶಿ ಜಯಶ್ರೀ ಕೋಟ್ಯಾನ್, ಲಯನ್ ವಸಂತ್ ಮರಿಯ, ಎಸ್‌ಡಿಎಂಸಿ ಅಧ್ಯಕ್ಷೆ ಪೂರ್ಣಿಮಾ, ಉಪಾಧ್ಯಕ್ಷ ಮಹಮ್ಮದ್ ಆಸಿಫ್, ನಿವೃತ್ತ ಪ್ರಾಧ್ಯಾಪಕ ವಿಠ್ಠಲ್ ಮಾಸ್ಟರ್, ಮಾಧ್ಯಮ ಮಿತ್ರ ಸಂತೋಷ್, ಚಂದ್ರಕಲಾ ರಾವ್ ಸೇರಿದಂತೆ ಗಣ್ಯರು, ಶಿಕ್ಷಕರು, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಅದೇ ದಿನ ಜನ್ಮದಿನ ಆಚರಿಸಿಕೊಳ್ಳುತ್ತಿದ್ದ ಚಂದ್ರಶೇಖರ್ ಅವರಿಗೆ ಗಣ್ಯರು ಜನ್ಮದಿನದ ಶುಭಾಶಯಗಳನ್ನು ತಿಳಿಸಿದರು.
ಕಾರ್ಯಕ್ರಮದ ನಿರೂಪಣೆಯನ್ನು ನೀತು ನಿರ್ವಹಿಸಿದರೆ, ಜಯಶ್ರೀ ಕೆ. ವಂದಿಸಿದರು. ಬಳಿಕ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಕಾರ್ಯಕ್ರಮಕ್ಕೆ ಆಗಮಿಸಿದ ವಿದ್ಯಾರ್ಥಿಗಳು, ಪೋಷಕರು ಹಾಗೂ ಅತಿಥಿಗಳಿಗೆ ಲಯನ್ಸ್ ಕ್ಲಬ್ ಕುಂಜಿಬೆಟ್ಟು, ಉಡುಪಿ ವತಿಯಿಂದ ಸಿಹಿ ಭೋಜನದ ವ್ಯವಸ್ಥೆ ಮಾಡಲಾಗಿತ್ತು.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲEditor Kannada Express 1st Floor, Raaj Towers Udupi - 576101
Kannadaexpress@gmail.com
© 2025 KannadaExpress. All Rights Reserved.
Design by GreyCrust Solutions