ಉಡುಪಿ: ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಪೂರಕವಾಗಿರುವ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಗ್ರಾಮೀಣ ಭಾಗದ ಜನರಿಗೆ ಸಮರ್ಪಕವಾಗಿ ತಲುಪುವಂತೆ ಮಾಡುವ ಅಗತ್ಯವಿದೆ ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ವಿನಯ ಕುಮಾರ್ ಸೊರಕೆ ಹೇಳಿದರು.
ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು ಹಾಗೂ ಪಕ್ಷದ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ಗ್ರಾಮಾಂತರ ಪ್ರದೇಶಗಳಲ್ಲಿ ಯುವಶಕ್ತಿಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸರ್ಕಾರದ ಮಹತ್ವಾಕಾಂಕ್ಷಿ ಕಾರ್ಯಕ್ರಮಗಳು ಹಾಗೂ ಸಂಘಟನೆಗಳಿಗೆ ಹೆಚ್ಚಿನ ಉತ್ತೇಜನ ನೀಡಬೇಕಾಗಿದೆ ಎಂದರು.
ಯುವಕರು ತಮ್ಮ ಪ್ರತಿಭೆ ಹಾಗೂ ಸಾಮರ್ಥ್ಯವನ್ನು ಬೆಳೆಸಿಕೊಳ್ಳುವುದರ ಜೊತೆಗೆ ಉದ್ಯೋಗ ಮತ್ತು ಉದ್ಯಮದ ಹೊಸ ಅವಕಾಶಗಳೊಂದಿಗೆ ಸಂಪರ್ಕ ಹೊಂದಲು ಇಂತಹ ವೇದಿಕೆಗಳು ಸಹಕಾರಿಯಾಗಲಿವೆ. ಯುವಕರನ್ನು ಸಮಾಜ ಸೇವೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಪೂರಕ ವಾತಾವರಣ ನಿರ್ಮಿಸುವುದು ಅಗತ್ಯ ಎಂದು ಅವರು ಹೇಳಿದರು.
ಈಗಾಗಲೇ ಜನಕಲ್ಯಾಣಕ್ಕಾಗಿ ‘ಪ್ರಜಾಸೇವೆ’ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಇದೇ ಸಂದರ್ಭದಲ್ಲಿ ಪ್ರಥಮ ಬಾರಿಗೆ ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದ್ದು, ಕರಾವಳಿ ಭಾಗದ ಅಭಿವೃದ್ಧಿಗೆ ಸಂಬಂಧಿಸಿದ ಪ್ರಮುಖ ವಿಚಾರಗಳನ್ನು ಸಚಿವ ಸಂಪುಟದ ಮುಂದೆ ಮಂಡಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಈ ಹಿನ್ನೆಲೆಯಲ್ಲಿ ಕರಾವಳಿಯಲ್ಲಿ ಕೈಗೊಳ್ಳಬೇಕಾದ ಅಭಿವೃದ್ಧಿ ಕಾರ್ಯಕ್ರಮಗಳ ನೀಲನಕ್ಷೆಯನ್ನು ಸಿದ್ಧಪಡಿಸಿ ಕ್ರೋಡೀಕರಿಸುವಂತೆ ಸೊರಕೆ ಸಲಹೆ ನೀಡಿದರು.
ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಪ್ರಚಾರ:
ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಮಾತನಾಡಿ, ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ಟೀಕಿಸುತ್ತಿದ್ದ ಬಿಜೆಪಿ, ಇದೀಗ ತಾನು ಅಧಿಕಾರದಲ್ಲಿರುವ ರಾಜ್ಯಗಳಲ್ಲಿಯೂ ಇದೇ ಮಾದರಿಯ ಯೋಜನೆಗಳನ್ನು ಜಾರಿಗೊಳಿಸುತ್ತಿದೆ ಎಂದು ಟೀಕಿಸಿದರು.
ರಾಜ್ಯದ ಗ್ಯಾರಂಟಿ ಯೋಜನೆಗಳ ಬಗ್ಗೆ ಜನರಲ್ಲಿ ಸಂಶಯ ಮೂಡಿಸುವುದೇ ಬಿಜೆಪಿಯ ಉದ್ದೇಶವಾಗಿದೆ. ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಪೂರಕವಾಗಿರುವ ಈ ಯೋಜನೆಗಳು ಪ್ರತಿಯೊಂದು ಗ್ರಾಮಕ್ಕೂ ತಲುಪುವಂತೆ ಮಾಡಲು ಗ್ರಾಮ ಮಟ್ಟದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿಗಳನ್ನು ರಚಿಸುವ ಅಗತ್ಯವಿದೆ ಎಂದು ಅವರು ಹೇಳಿದರು.
ಕರಾವಳಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯುವ ಹಿನ್ನೆಲೆಯಲ್ಲಿ, ಜಿಲ್ಲೆಯ ಅಭಿವೃದ್ಧಿ ಹಾಗೂ ಜನರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಸಮಗ್ರ ಮಾಹಿತಿ ಸಂಗ್ರಹಿಸಿ, ಪ್ರಮುಖ ಬೇಡಿಕೆಗಳು ಹಾಗೂ ಅಭಿವೃದ್ಧಿ ಯೋಜನೆಗಳನ್ನು ಸರ್ಕಾರದ ಗಮನಕ್ಕೆ ತರಲು ಸಭೆಯಲ್ಲಿ ನಿರ್ಧರಿಸಲಾಯಿತು.
ಸಭೆಯಲ್ಲಿ ಪಕ್ಷದ ಮುಖಂಡರಾದ ದಿನೇಶ್ ಮಳವಳ್ಳಿ, ಹರೀಶ್ ಕಿಣಿ, ರೋಶನಿ ಒಲಿವರಾ, ದಿನೇಶ್ ಪುತ್ರನ್, ಜ್ಯೋತಿ ಹೆಬ್ಬಾರ್, ಮೀನಾಕ್ಷಿ ಮಾಧವ ಬನ್ನಂಜೆ, ಹರಿಪ್ರಸಾದ್ ರೈ ಸೇರಿದಂತೆ ವಿವಿಧ ಬ್ಲಾಕ್ ಅಧ್ಯಕ್ಷರು ಹಾಗೂ ಪಕ್ಷದ ಮುಖಂಡರು ಉಪಸ್ಥಿತರಿದ್ದರು.
ಬ್ಲಾಕ್ ಅಧ್ಯಕ್ಷರಾದ ರಮೇಶ್ ಕಾಂಚನ್, ಗೋಪಿನಾಥ್ ಭಟ್, ವೈ. ಸುಕುಮಾರ್, ಸಂತೋಷ್ ಕುಲಾಲ್, ಸುಭೋದ ರಾವ್ ಕಾರ್ಕಳ, ಮದನ್ ಕುಮಾರ್, ಮಹಾಬಲ ಕುಂದರ್, ನವೀನ್ ಚಂದ್ರ ಸುವರ್ಣ, ಆನಂದ ಪೂಜಾರಿ ಬೈಂದೂರು, ಚಂದ್ರಶೇಖರ್ ಶೆಟ್ಟಿ ಕುಂದಾಪುರ, ಗೋಪಾಲ ಬಂಗೇರ ಕೋಟ, ರೋಶನ್ ಶೆಟ್ಟಿ, ಜಯಕುಮಾರ್, ಲಕ್ಷೀಶ ಶೆಟ್ಟಿ, ಅಶೋಕ್ ಕುಮಾರ್ ಎರ್ಮಾಳ್, ಲಕ್ಷ್ಮಣ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.
ಜಿಲ್ಲಾ ವಕ್ತಾರ ಭಾಸ್ಕರ ರಾವ್ ಕಿದಿಯೂರು ಸ್ವಾಗತಿಸಿದರು. ಮಹಿಳಾ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷೆ ಜ್ಯೋತಿ ಹೆಬ್ಬಾರ್ ಧನ್ಯವಾದ ಅರ್ಪಿಸಿದರು.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲEditor Kannada Express 1st Floor, Raaj Towers Udupi - 576101
Kannadaexpress@gmail.com
© 2025 KannadaExpress. All Rights Reserved.
Design by GreyCrust Solutions