ಕೋಟ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಳೆದ ಸುಮಾರು ಒಂದು ವಾರದಿಂದ ದಿನ-ರಾತ್ರಿ ನಿರಂತರವಾಗಿ ವಿದ್ಯುತ್ ವ್ಯತ್ಯಯ ಉಂಟಾಗುತ್ತಿದ್ದು, ಸಾರ್ವಜನಿಕರಲ್ಲಿ ತೀವ್ರ ಗೊಂದಲ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಕೋಟ ನಾಗೇಂದ್ರ ಪುತ್ರನ್ ಆರೋಪಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಅವರು, “ಪವರ್ ಪ್ಲಾಂಟ್‌ನಲ್ಲಿ ತಾಂತ್ರಿಕ ಸಮಸ್ಯೆಯಿದ್ದರೆ ಸಂಬಂಧಪಟ್ಟ ಮೇಲಧಿಕಾರಿಗಳು ಸಾರ್ವಜನಿಕರಿಗೆ ಸ್ಪಷ್ಟ ಮಾಹಿತಿ ನೀಡಬೇಕು. ಈಗಾಗಲೇ ಉರಿಯುವ ಬಿಸಿಲಿನ ತಾಪದಿಂದ ಜನ ಜೀವನವೇ ಅಸ್ತವ್ಯಸ್ತವಾಗಿರುವ ಸಂದರ್ಭದಲ್ಲಿ ಪದೇಪದೆ ವಿದ್ಯುತ್ ಕಡಿತವಾಗುತ್ತಿರುವುದು ಜನರನ್ನು ಸಂಕಷ್ಟಕ್ಕೆ ತಳ್ಳಿದೆ” ಎಂದು ಹೇಳಿದ್ದಾರೆ.
“ದೊಡ್ಡ ದೊಡ್ಡ ಕೈಗಾರಿಕೆಗಳಿಗೆ ನಿರಂತರ ವಿದ್ಯುತ್ ಸರಬರಾಜು ಮಾಡಲಾಗುತ್ತಿದ್ದು, ಸಾಮಾನ್ಯ ಜನತೆಗೆ ಮಾತ್ರ ಅನಗತ್ಯವಾಗಿ ವಿದ್ಯುತ್ ಕಡಿತ ಮಾಡಲಾಗುತ್ತಿದೆ ಎಂಬ ಅನುಮಾನ ಸಾರ್ವಜನಿಕರಲ್ಲಿ ಮೂಡಿದೆ. ವಿದ್ಯುತ್ ಕಳ್ಳತನ ನಡೆಯುತ್ತಿದೆಯೇ ಅಥವಾ ಬೇರೆ ಕಾರಣವಿದೆಯೇ ಎಂಬುದರ ಕುರಿತು ಅಧಿಕಾರಿಗಳು ಸ್ಪಷ್ಟನೆ ನೀಡಬೇಕು” ಎಂದು ಒತ್ತಾಯಿಸಿದರು.
“ರಾಜ್ಯದ ಬೇರೆ ಯಾವ ಜಿಲ್ಲೆಯಲ್ಲೂ ಕಾಣದ ರೀತಿಯ ಈ ಸಮಸ್ಯೆ ಉಡುಪಿ ಜಿಲ್ಲೆಯಲ್ಲಿ ಮಾತ್ರ ಕಳೆದ ಒಂದು ವಾರದಿಂದ ನಿರಂತರವಾಗಿ ಕಾಣಿಸುತ್ತಿದೆ. ಜನರ ಸಮಸ್ಯೆಯನ್ನು ಅರಿಯದೆ ಮನಬಂದಂತೆ ಕರೆಂಟ್ ಕಟ್ ಮಾಡುವುದನ್ನು ನಿಲ್ಲಿಸಬೇಕು. ತಕ್ಷಣ ಸಂಬಂಧಪಟ್ಟ ಅಧಿಕಾರಿಗಳು ಕೋಟ ಹಾಗೂ ಸುತ್ತಮುತ್ತಲಿನ ಜನತೆಗೆ ಸಮರ್ಪಕ ಉತ್ತರ ನೀಡಬೇಕು” ಎಂದು ಅವರು ಆಗ್ರಹಿಸಿದ್ದಾರೆ.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲEditor Kannada Express 1st Floor, Raaj Towers Udupi - 576101
+919008424891
Kannadaexpress@gmail.com
© 2025 KannadaExpress. All Rights Reserved.
Design by GreyCrust Solutions