ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಇ20 ಪೆಟ್ರೋಲ್ ನೀತಿಯಿಂದ ವಾಹನಗಳ ಎಂಜಿನ್ ಹಾಗೂ ಬಿಡಿಭಾಗಗಳಿಗೆ ಹಾನಿಯಾಗುತ್ತಿದ್ದು, ಇದರಿಂದ ಸಾಮಾನ್ಯ ಜನರು ಆರ್ಥಿಕ ಸಂಕಷ್ಟಕ್ಕೆ ಸಿಲುಕುವಂತಾಗಿದೆ. ಆದ್ದರಿಂದ ಪೆಟ್ರೋಲ್‌ನಲ್ಲಿನ ಎಥೆನಾಲ್ ಮಿಶ್ರಣದ ಪ್ರಮಾಣವನ್ನು ಕಡಿಮೆ ಮಾಡಬೇಕು ಅಥವಾ ಹಳೆಯ ವಾಹನಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು ಎಂದು ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಮುಖಂಡ ನವೀನ್ ಸಾಲಿಯಾನ್ ಆಗ್ರಹಿಸಿದ್ದಾರೆ.
ಈ ಕುರಿತು ಮಾಧ್ಯಮದ ಜೊತೆ ಮಾತನಾಡಿದ ಅವರು, ಕೇಂದ್ರದ ಬಿಜೆಪಿ ಸರ್ಕಾರ ಪೆಟ್ರೋಲ್‌ನಲ್ಲಿ ಶೇ.20ರಷ್ಟು ಎಥೆನಾಲ್ ಮಿಶ್ರಣ ಮಾಡುವ ನೀತಿಯನ್ನು ಜಾರಿಗೆ ತಂದಿದೆ. ಆದರೆ, ಕರ್ನಾಟಕ ರಾಜ್ಯ ಸರ್ಕಾರದ ನಿರ್ದೇಶನದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಸಂಗ್ರಹಿಸಲಾದ 63 ಪೆಟ್ರೋಲ್ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಿದಾಗ, ಕೆಲವು ಮಾದರಿಗಳಲ್ಲಿ ನಿಗದಿತ ಶೇ.20ಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಎಥೆನಾಲ್ ಮಿಶ್ರಣವಾಗಿರುವುದು ಪತ್ತೆಯಾಗಿದೆ. ಕೆಲವು ಮಾದರಿಗಳಲ್ಲಿ ಶೇ.25ರಿಂದ ಶೇ.30ರಷ್ಟು ಅಥವಾ ಅದಕ್ಕಿಂತ ಹೆಚ್ಚಿನ ಪ್ರಮಾಣದ ಎಥೆನಾಲ್ ಇರುವುದು ಆತಂಕಕಾರಿ ಸಂಗತಿಯಾಗಿದೆ ಎಂದು ಹೇಳಿದರು.
ಎಥೆನಾಲ್ ಮಿಶ್ರಣದಿಂದ ಪೆಟ್ರೋಲ್ ಬೆಲೆಯಲ್ಲಿ ಸುಮಾರು 50 ರೂ.ಗಳಷ್ಟು ಇಳಿಕೆ ಮಾಡಲು ಸಾಧ್ಯ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಈ ಹಿಂದೆ ಹೇಳಿದ್ದರು. ಆದರೆ, ಇಂದು ಉಡುಪಿ ಜಿಲ್ಲೆಯಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 110 ರೂ.ಗಿಂತ ಹೆಚ್ಚಿದೆ. ಬೆಲೆ ಇಳಿಕೆಯ ಭರವಸೆ ಈಡೇರಿಲ್ಲ. ಮತ್ತೊಂದೆಡೆ ಎಥೆನಾಲ್ ಮಿಶ್ರಣದಿಂದ ವಾಹನಗಳ ಎಂಜಿನ್ ಹಾಗೂ ಬಿಡಿಭಾಗಗಳಲ್ಲಿ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ. ನನ್ನ ಸ್ವಂತ ಕಾರು ಕೂಡ ಈ ಪೆಟ್ರೋಲ್ ಬಳಕೆಯಿಂದ ಎರಡು-ಮೂರು ಬಾರಿ ದುರಸ್ತಿಗೆ ಒಳಗಾಗಿದೆ ಎಂದು ಅವರು ಆರೋಪಿಸಿದರು.
ಹಳೆಯ ವಾಹನಗಳ ಎಂಜಿನ್‌ಗಳು ಇ20 ಪೆಟ್ರೋಲ್ ಬಳಕೆಗೆ ಸಂಪೂರ್ಣವಾಗಿ ಹೊಂದಿಕೆಯಾಗುವುದಿಲ್ಲ. ಇದರಿಂದ ವಿಶೇಷವಾಗಿ ಹಳೆಯ ಹಾಗೂ ಸೆಕೆಂಡ್‌ಹ್ಯಾಂಡ್ ವಾಹನಗಳನ್ನು ಅವಲಂಬಿಸಿರುವ ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಹೆಚ್ಚಿನ ಆರ್ಥಿಕ ಹೊರೆ ಬೀಳುತ್ತಿದೆ. ವಾಹನದ ಎಂಜಿನ್ ದುರಸ್ತಿಗೆ ಸಾವಿರಾರು ರೂಪಾಯಿ ವೆಚ್ಚ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಜನಸಾಮಾನ್ಯರ ಜೀವನ ನಿರ್ವಹಣೆಯ ಮೇಲೆ ಮತ್ತಷ್ಟು ಹೊರೆ ಹಾಕಬಾರದು ಎಂದು ಹೇಳಿದರು.
ಕಬ್ಬು ಬೆಳೆಗಾರರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಎಥೆನಾಲ್ ಮಿಶ್ರಣ ನೀತಿಯನ್ನು ಸಮರ್ಥಿಸಿಕೊಳ್ಳುತ್ತಿರುವ ಕೇಂದ್ರ ಸರ್ಕಾರ, ವಾಹನ ಸವಾರರ ಸಮಸ್ಯೆಗಳಿಗೂ ಸಮಾನ ಆದ್ಯತೆ ನೀಡಬೇಕು. ರೈತರ ಹೆಸರಿನಲ್ಲಿ ಭರವಸೆ ನೀಡುವುದಷ್ಟೇ ಅಲ್ಲದೆ, ವಾಹನ ಮಾಲೀಕರ ಹಿತವನ್ನೂ ರಕ್ಷಿಸಬೇಕು ಎಂದು ಒತ್ತಾಯಿಸಿದರು.
ಕೇಂದ್ರ ಸರ್ಕಾರ ಕೂಡಲೇ ಪೆಟ್ರೋಲ್‌ನಲ್ಲಿನ ಎಥೆನಾಲ್ ಮಿಶ್ರಣದ ಪ್ರಮಾಣವನ್ನು ಕಡಿಮೆ ಮಾಡಬೇಕು. ಇಲ್ಲವಾದಲ್ಲಿ ಐದುರಿಂದ ಹತ್ತು ವರ್ಷಗಳ ಹಿಂದಿನ ವಾಹನಗಳಿಗೆ ಸೂಕ್ತವಾದ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು. ಇ20 ಪೆಟ್ರೋಲ್‌ಗೆ ಹೊಂದಿಕೆಯಾಗುವ ಎಂಜಿನ್ ವ್ಯವಸ್ಥೆ ಅಥವಾ ಹಳೆಯ ವಾಹನಗಳ ಮಾಲೀಕರಿಗೆ ಅಗತ್ಯ ಪರಿಹಾರ ಒದಗಿಸುವ ಮೂಲಕ ಜನಸಾಮಾನ್ಯರ ಹಿತ ಕಾಪಾಡಬೇಕು ಎಂದು ನವೀನ್ ಸಾಲಿಯಾನ್ ಆಗ್ರಹಿಸಿದರು.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲEditor Kannada Express 1st Floor, Raaj Towers Udupi - 576101
Kannadaexpress@gmail.com
© 2025 KannadaExpress. All Rights Reserved.
Design by GreyCrust Solutions